ಶಿವಮೊಗ್ಗ :- ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಹಾರನಹಳ್ಳಿ ಜಿ.ಪಂ. ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು.
ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಬಾಳೆಕೊಪ್ಪ, ಹಾರನಹಳ್ಳಿ, ಕೊನಗವಳ್ಳಿ, ತ್ಯಾಜವಳ್ಳಿ ಹಾಗೂ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಕೃಷಿ ಜಮೀನುಗಳು, ಬೆಳೆಗಳ ಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ರೈತರಿಂದ ನೇರವಾಗಿ ಮಾಹಿತಿ ಪಡೆದರು.
ರೈತರು ಮಳೆಯ ಅಭಾವದಿಂದ ಬೆಳೆಗಳು ಒಣಗುತ್ತಿರುವುದು, ಜನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆ ಎದುರಾಗಿರುವುದು ಸೇರಿದಂತೆ ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಮಸ್ಯೆಗಳನ್ನು ಆಲಿಸಿದ ಶಾಸಕರು, ರೈತರ ಸಮಸ್ಯೆಗಳ ಕುರಿತು ಸರ್ಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳ ಗಮನಸೆಳೆಯುವ ಮೂಲಕ ತ್ವರಿತ ಪರಿಹಾರ ಕಂಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ವೇಳೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಗ್ರಾಮವಾರು ಸಮಗ್ರ ವರದಿ ಸಿದ್ಧಪಡಿಸಿ, ಬೆಳೆ ಹಾನಿಯ ನಿಖರ ಮಲ್ಯಮಾಪನ ನಡೆಸುವಂತೆ ಹಾಗೂ ಕುಡಿಯುವ ನೀರು, ಮೇವು, ನೀರಾವರಿ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಬರ ನಿರ್ವಹಣೆಗೆ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳು ಅರ್ಹ ರೈತರಿಗೆ ತಲುಪುವಂತೆ ಕ್ರಮವಹಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಪ್ರಮುಖರು ಹಾಗೂ ಗ್ರಾಮಸ್ಥರು ಹಾಜರಿದ್ದರು.


