<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಫಾರಂ ನಂ-7 ದುರ್ಬಳಕೆ ಆರೋಪ : ಚುನಾವಣಾಧಿಕಾರಿ ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ

Banner Ad
ಫಾರಂ ನಂ-7 ದುರ್ಬಳಕೆ ಆರೋಪ : ಚುನಾವಣಾಧಿಕಾರಿ ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ

ಬೆಂಗಳೂರು :- ರಾಜ್ಯದಲ್ಲಿ Form-7 ದುರ್ಬಳಕೆ ಮಾಡಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂಬ ಆರೋಪ ರಾಜಕೀಯ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ, ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ.

Form-7 ಅರ್ಜಿ ಸಲ್ಲಿಸಿದ ತಕ್ಷಣವೇ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದಿಲ್ಲ. ಸಂಬಂಧಪಟ್ಟ ಮತದಾರರಿಗೆ ಮೊದಲು ನೋಟಿಸ್ ನೀಡಿ, ವಿಚಾರಣೆ ನಡೆಸಿದ ಬಳಿಕವೇ ಚುನಾವಣಾ ನೋಂದಣಾಧಿಕಾರಿ (ERO) ತೀರ್ಮಾನ ಕೈಗೊಳ್ಳುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿ. ಅನ್ಬುಕುಮಾರ್, Form-7 ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು. ಒಬ್ಬ ವ್ಯಕ್ತಿ ಒಂದು ದಿನದಲ್ಲಿ 10 Form-7 ಅರ್ಜಿಗಳನ್ನು ಸಲ್ಲಿಸಬಹುದು. ಬೂತ್ ಲೆವೆಲ್ ಏಜೆಂಟ್‌ಗಳು (BLA) ಒಟ್ಟು 50 ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ನಿಗದಿತ ಮಿತಿಗಿಂತ ಹೆಚ್ಚಿನ ಅರ್ಜಿಗಳು ಬಂದರೆ ಅವುಗಳ ಕುರಿತು ERO ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿರುವುದು ವಿಚಾರಣೆಯಲ್ಲಿ ದೃಢಪಟ್ಟರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವಂತೆ Form-7 ಅರ್ಜಿ ಬಂದ ತಕ್ಷಣ ಹೆಸರು ಡಿಲೀಟ್ ಮಾಡುವುದಿಲ್ಲ. ಮೊದಲು ಸಂಬಂಧಪಟ್ಟ ಮತದಾರರಿಗೆ ನೋಟಿಸ್ ನೀಡಲಾಗುತ್ತದೆ. ಬಳಿಕ ವಿಚಾರಣೆ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ ಸಲ್ಲಿಕೆಯಾಗಿರುವ Form-7 ಅರ್ಜಿಗಳ ಆಧಾರದಲ್ಲಿ ಯಾರ ಹೆಸರನ್ನೂ ನೇರವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ ಎಂದು ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ 43,82,313 ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದ್ದು, ಈ ಪೈಕಿ 43,55,818 ನೋಟಿಸ್‌ಗಳನ್ನು ವಿತರಿಸಲಾಗಿದೆ ಎಂದು ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.

ಇನ್ನೂ 26,495 ನೋಟಿಸ್‌ಗಳ ವಿತರಣೆ ಬಾಕಿಯಿದ್ದು, ವಿತರಿಸಲಾದ ನೋಟಿಸ್‌ಗಳಿಗೆ ಸಂಬಂಧಿಸಿದಂತೆ 36,89,063 ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಅಕ್ಟೋಬರ್ 22 ಕೊನೆಯ ದಿನಾಂಕವಾಗಿದೆ.

SIR ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದರೆ, ಅವರನ್ನು ಮತ್ತೆ ಪಟ್ಟಿಗೆ ಸೇರಿಸಲು ವಿಶೇಷ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಅರ್ಹ ಮತದಾರರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಹೆಸರು ಸೇರ್ಪಡೆಗೆ ಅರ್ಹ ಮತದಾರರು Form-6 ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

Form-7 ಅರ್ಜಿಗಳನ್ನು ಸಾಮೂಹಿಕವಾಗಿ ಸಲ್ಲಿಸಿ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಆರೋಪಿಸಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಎದುರು ಪ್ರತಿಭಟನೆಯೂ ನಡೆದಿತ್ತು.

ಇದರ ಬೆನ್ನಲ್ಲೇ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಅಥವಾ ಘೋಷಣೆ ನೀಡಿ Form-7 ಸೇರಿದಂತೆ ಚುನಾವಣಾ ಅರ್ಜಿಗಳನ್ನು ಸಲ್ಲಿಸಿರುವುದು ವಿಚಾರಣೆಯಲ್ಲಿ ಕಂಡುಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ EROಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *