<div class="dreamweb-ad dreamweb-banner-ad"><img src="https://shimogatoday.com/wp-content/uploads/2026/10/krishi.jpg" alt="Banner Ad" /></div>ಏಷ್ಯನ್‌ ಗೇಮ್ಸ್‌ ನಲ್ಲಿ ಚಿನ್ನದ ಪದಕ ವಿಜೇತರಿಗೆ 1ಕೋಟಿ ನಗದು, ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ

Banner Ad
ಏಷ್ಯನ್‌ ಗೇಮ್ಸ್‌ ನಲ್ಲಿ ಚಿನ್ನದ ಪದಕ ವಿಜೇತರಿಗೆ 1ಕೋಟಿ ನಗದು, ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ

ಬೆಂಗಳೂರು :- ಇತ್ತೀಚಿಗೆ ಮುಕ್ತಾಯವಾದ ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ರಾಜ್ಯದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಇಂದು ಸನ್ಮಾನಿಸಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಡಾ. ಜಿ. ಪರಮೇಶ್ವರ್ ಏಷ್ಯನ್ ಗೇಮ್ಸ್‌ನಲ್ಲಿ ರಾಜ್ಯದ ಕ್ರೀಡಾಪಟುಗಳು ತೋರಿದ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಕರ್ನಾಟಕದ ಕ್ರೀಡಾ ಪ್ರತಿಭೆ ಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ಉದ್ದೇಶ ದಿಂದ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಪ್ರಕಟಿಸಿದೆ ಎಂದರು.

ನಗದು ಪುರಸ್ಕಾರ ಭಾರೀ ಹೆಚ್ಚಳ: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ 35 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 15ಲಕ್ಷ ರೂ. ನಗದು ಪುರಸ್ಕಾರ ನೀಡಲಾಗುತ್ತಿತ್ತು. ಪರಿಷ್ಕೃತ ಮೊತ್ತದ ಪ್ರಕಾರ, ಚಿನ್ನದ ಪದಕ ವಿಜೇತರಿಗೆ 1 ಕೋಟಿ ರೂ, ಬೆಳ್ಳಿ ಪದಕ ವಿಜೇತರಿಗೆ 75ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ ೫೦ಲಕ್ಷ ರೂ. ನಗದು ಪುರಸ್ಕಾರ ನೀಡಲಾಗುವುದು ಎಂದರು.

ಈ ಬಾರಿ ಎಂಟು ಮಂದಿಗೆ ಈ ನಗದು ಪುರಸ್ಕಾರ ಸಿಗಲಿದ್ದು, ಜೊತೆಗೆ ಈ ಎಂಟು ಪದಕ ವಿಜೇತರಿಗೆ ಏಷ್ಯನ್ ಗೇಮ್ಸ್ 2026ರಲ್ಲಿ ಭಾಗವಹಿಸಿದ್ದ ಕ್ಕಾಗಿ, ಪದಕ ಸಾಧನೆಗೆ ನೀಡಲಾಗುವ ನಗದು ಪುರಸ್ಕಾರದ ಹೆಚ್ಚುವರಿಯಾಗಿ ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು. ಎಂದರು.

20 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ನಗದು ಬಹುಮಾನ: ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ 5 ಲಕ್ಷ ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ. ರಾಜ್ಯದ ಕ್ರೀಡಾಪಟು ಗಳು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವುದೇ ಮಹತ್ವದ ಸಾಧನೆಯಾಗಿದ್ದು, ಪದಕ ಗಳಿಸಿದವರ ಜೊತೆಗೆ ಕ್ರೀಡಾಕೂಟ ದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ: ಏಷ್ಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಅರ್ಹ ಹಾಗೂ ಆಸಕ್ತ ಪದಕ ವಿಜೇತ ಕ್ರೀಡಾಪಟುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇರ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ ಎಂದರು.

10ಲಕ್ಷ ಪ್ರೋತ್ಸಾಹಧನ: ಒಲಿಂಪಿಕ್ಸ್‌ನಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭಾಗವಹಿಸುವಿಕೆ ಮತ್ತು ಸಾಧನೆಯನ್ನು ಹೆಚ್ಚಿಸುವ ಉದ್ದೇಶದಿಂದ ಜರಿಗೊಳಿಸಿರುವ ಒಲಿಂಪಿಕ್ಸ್’ ಯೋಜನೆಯಡಿ 2026-27ನೇ ಸಾಲಿಗೆ ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರ ಪೈಕಿ ಆಯ್ದ ನಾಲ್ವರು ಕ್ರೀಡಾಪಟುಗಳನ್ನು (ಎಂ.ಆರ್.ಪೂವಮ್ಮ, ಸ್ನೇಹಾ ಎಸ್.ಎಸ್., ಶ್ರೇಯಾಂಕ ಪಾಟೀಲ್, ಶಿಲ್ಪಾ ಕೆ.ಎಸ್) ಸೇರ್ಪಡೆ ಮಾಡಲಾಗಿದೆ. ಈ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್ ಸಿದ್ಧತೆ, ತರಬೇತಿ ಹಾಗೂ ಇತರೆ ಅಗತ್ಯಗಳಿಗೆ ಪ್ರಸಕ್ತ ಸಾಲಿನಲ್ಲಿ ತಲಾ 10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುವುದು. ಎಂದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *