Banner Ad
ಆಶ್ರಯ ಮನೆಗಳನ್ನು ತಕ್ಷಣ ವಿತರಿಸಲು ಒತ್ತಾಯಿಸಿ ಅ. 27ರಂದು ರಾಷ್ಟ್ರ ಭಕ್ತರ ಬಳಗದಿಂದ ಪ್ರತಿಭಟನೆ

ಶಿವಮೊಗ್ಗ: ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಸ್ಥಗಿತಗೊಂಡಿರುವ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿ ಪುನರಾರಂಭಿಸಿ, ಅರ್ಹ ಬಡ ಫಲಾನುಭವಿಗಳಿಗೆ ಮನೆಗಳನ್ನು ಶೀಘ್ರ ವಿತರಿಸುವಂತೆ ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಅ. 27ರಂದು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಷ್ಟ್ರ ಭಕ್ತ ಬಳಗದ ಸಂಚಾಲಕರಾದ ಕೆ.ಎಸ್. ಈಶ್ವರಪ್ಪ ಹಾಗೂ ಕೆ.ಈ. ಕಾಂತೇಶ್ ತಿಳಿಸಿದರು.

ಅವರು ಇಂದು  ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರಲ್ಲಿ ಗೋವಿಂದಾಪುರದಲ್ಲಿ 3000 ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ 1300 ಆಶ್ರಯ ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು. ಯೋಜನೆ ಆರಂಭವಾಗಿ ಒಂಬತ್ತು ವರ್ಷ ಕಳೆದರೂ ಇದುವರೆಗೆ ಕೇವಲ ೪೬೩ ಮನೆಗಳನ್ನು ಮಾತ್ರ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.

ಕಡು ಬಡವರು ಹಾಗೂ ಕೂಲಿ ಕಾರ್ಮಿಕರಾಗಿರುವ ಫಲಾನುಭವಿಗಳು ಸಾಲ ಮಾಡಿ, ಮನೆಯ ಒಡವೆ ಹಾಗೂ ಮಂಗಳಸೂತ್ರಗಳನ್ನು ಅಡಮಾನವಿಟ್ಟು ತಲಾ 80000 ಪಾವತಿಸಿದ್ದಾರೆ. ಆದರೆ ವರ್ಷಗಳೇ ಕಳೆದರೂ ಮನೆ ದೊರೆಯದೆ, ಸಾಲದ ಬಡ್ಡಿ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಗೋವಿಂದಾಪುರದಲ್ಲಿ ಮನೆಗಳ ನಿರ್ಮಾಣದ ಗುತ್ತಿಗೆ ಪಡೆದಿರುವ ನಾಗಾರ್ಜುನ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಸರ್ಕಾರದಿಂದ 15 ಕೋಟಿ ಬಾಕಿ ಇರುವ ಕಾರಣ ಕಾಮಗಾರಿ ಸ್ಥಗಿತಗೊಂಡಿದೆ. ಗುತ್ತಿಗೆದಾರರು ಯಂತ್ರೋಪಕರಣ ಹಾಗೂ ಕಾರ್ಮಿಕರನ್ನು ಸ್ಥಳದಿಂದ ತೆರವುಗೊಳಿಸಿರುವುದರಿಂದ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದೆ ಎಂದು ತಿಳಿಸಿದರು.

ಗೋಪಿಶೆಟ್ಟಿಕೊಪ್ಪದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನಡೆಯಬೇಕಿದ್ದ ಕಾಮಗಾರಿಯೂ ಪ್ರಗತಿ ಕಾಣುತ್ತಿಲ್ಲ. ಈ ಕುರಿತು ಅಧಿಕಾರಿಗಳನ್ನು ವಿಚಾರಿಸಿದಾಗ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ದೂರಿದರು.

ಈ ಹಿಂದೆ 2024ರ ಜುಲೈ 18ರಂದು ರಾಷ್ಟ್ರ ಭಕ್ತರ ಬಳಗದ ವತಿಯಿಂದ ಮಹಾನಗರ ಪಾಲಿಕೆ ಎದುರು ಬೃಹತ್ ಪ್ರತಿಭಟನೆ ಹಾಗೂ ಧರಣಿ ನಡೆಸಲಾಗಿತ್ತು. ಆಗ ಅಧಿಕಾರಿಗಳು ಒಂದೆರಡು ತಿಂಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿಯೂ ಯೋಜನೆಗೆ ಅಗತ್ಯ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೆ ಕಾಮಗಾರಿ ಪುನರಾರಂಭವಾಗಿಲ್ಲ ಎಂದು ಹೇಳಿದರು.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಅವರು ತಕ್ಷಣ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪುನರಾರಂಭಿಸಿ, ಬಡ ಫಲಾನುಭವಿಗಳಿಗೆ ಶೀಘ್ರ ಮನೆಗಳನ್ನು ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

ಬಳಗದ ಈ. ವಿಶ್ವಾಸ್, ಮೋಹನ್ ಜಾಧವ್, ಗೋವಿಂದಪ್ಪ, ನಾಗರಾಜ್, ರಾಜಯ್ಯ, ಶ್ರೀಕಾಂತ್ ಇದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *